ಬೆಂಗಳೂರು,ಆ.30- ಜೆಡಿಎಸ್ ರಾಷ್ಟ್ರೀಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ರಾಷ್ಟ್ರೀಯ ಕಾರ್ಯಾಧ್ಯಕ್ಷರು ಸೇರಿದಂತೆ 60 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರೆ, ಉಪಾಧ್ಯಕ್ಷರಾಗಿ ಮಹಾರಾಷ್ಟ್ರದ ಶ್ರೀಪತ್ ರಾವ್ ಶಿಂಧೆ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಗಳಾಗಿ ಕೆ.ಆರ್.ಶಿವಕುಮಾರ್ ಅವರನ್ನು ನೇಮಕ ಮಾಡಿದ್ದು, ವಿಧಾನಪರಿಷತ್ನ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಅದೇ ರೀತಿ ಪ್ರಧಾನ ಕಾರ್ಯದರ್ಶಿಗಳಾಗಿ ಕೇರಳದ ಡಾ.ನೀಲ ಲೋಹಿತ ದಾಸನ್ ನಾಡರ್, ಶಾಸಕ ಎನ್.ಎನ್.ನಾರಾಯಣಸ್ವಾಮಿ, ಮೊಹಮ್ಮದ್ ಕುನ್ನಿ, ಆಂಧ್ರಪ್ರದೇಶದ ಗಟ್ಟು ಬಾಬು, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಊದಿಗೆರೆ ರಮೇಶ್, ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್, ಮಹಮ್ಮದ್ ಜಫ್ರುಲ್ಲಾ ಖಾನ್ ಅವರು ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ಕಾರ್ಯದರ್ಶಿಯಾಗಿ ವೀರೇಶ್ ಮಹಾಂತಿ ಮಠ್ ಹಾಗೂ ವಕ್ತಾರರಾಗಿ ತನ್ವೀರ್ ಅಹಮ್ಮದ್ಉಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ವೈ.ಎಸ್.ವಿ.ದತ್ತ ಸೇರಿದಂತೆ ದೇಶದ ವಿವಿಧ ರಾಜ್ಯಗಳ 60 ಮಂದಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ 11 ಮಂದಿಯನ್ನು ಕಾರ್ಯಕಾರಿ ಸಮಿತಿಯ ಆಹ್ವಾನಿತ ಸದಸ್ಯರನ್ನಾಗಿ ಗೌಡರು ನೇಮಕ ಮಾಡಿದ್ದಾರೆ.