ಗ್ರಾ.ಪಂ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧ: ಎಸ್ ಟಿ ಸೋಮಶೇಖರ್

0
62

ಬೆಂಗಳೂರು: ಇನ್ನು 2-3 ವಾರದೊಳಗೆ ಗ್ರಾ. ಪಂ ಚುನಾವಣೆ ಘೋಷಣೆಯಾಗಬಹುದು. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು..
67ನೇ ಅಖಿಲ ಭಾರತ ಸಹಕಾರ ಸಪ್ತ‍ಾಹ – 2020 ಕಾರ್ಯಕ್ರಮಕ್ಕಾಗಿ ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 19 ರ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಜನವರಿ ವೇಳೆಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದಕ್ಕೆ ಹಾಕಲು ಸರ್ಕಾರ ತೀರ್ಮಾನಿಸಿತ್ತೇ ವಿನಹ ಇದರಲ್ಲಿ ಯಾವುದೇ ರಾಜಕಾರಣವಿಲ್ಲ. ಆದರೆ, ಕಾಂಗ್ರೆಸ್ ನವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೆ ಏನೂ ಬರುವುದಿಲ್ಲ. ಗ್ರಾ. ಪಂ ಚುನಾವಣೆಗಳು ನಡೆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಕಷ್ಟವಾಗುತ್ತದೆ. ಮಾಸ್ಕ್ ಧರಿಸದೇ ಸಮಸ್ಯೆಗಳಾದರೆ ಎಂಬ ಆತಂಕ ಸರ್ಕಾರವನ್ನು ಕಾಡುತ್ತಿತ್ತು. ಆದರೆ, ಕಾಂಗ್ರೆಸ್ ನವರು ಕೋರ್ಟ್ ಹೋಗಿದ್ದರು. ಇನ್ನು 2-3 ವಾರದೊಳಗೆ ಚುನಾವಣೆ ಘೋಷಣೆಯಾಗಬಹುದು. ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದು ಸಚಿವ ಸೋಮಶೇಖರ್ ಹೇಳಿದರು.

ಆತ್ಮನಿರ್ಭರ ಅಡಿ ಹೆಚ್ಚುವರಿ 600 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ

ಆತ್ಮನಿರ್ಭರ ಅಡಿ ಹೆಚ್ಚುವರಿ 600 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಅನ್ನು ಆತ್ಮನಿರ್ಭರ ಯೋಜನೆಯಡಿ ಘೋಷಣೆ ಮಾಡಿತು. ಅದರಲ್ಲಿ ರಾಜ್ಯದ ಪಾಲಾದ 4750 ಕೋಟಿ ರೂಪಾಯಿಗಳು ಬಂದಿದ್ದು, ಇದರ ಮೂಲಕ ವಿವಿಧ ಕ್ಷೇತ್ರಗಳಿಗೆ ಸಾಲವನ್ನು ಸಹಕಾರ ಇಲಾಖೆ ಮೂಲಕ ವಿತರಣೆ ಮಾಡಲಾಗುತ್ತಿದೆ. ಆದರೆ, ಸಹಕಾರ ಇಲಾಖೆಗೆ ಆರ್ಥಿಕ ನಿರ್ಭರದಡಿ ಇನ್ನೂ ಹೆಚ್ಚಿನ ಅನುದಾನ ಬೇಕಿರುವುದರಿಂದ 600 ಕೋಟಿ ರೂಪಾಯಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಆತ್ಮನಿರ್ಭರ ಯೋಜನೆಯಡಿ ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇದರ ಮೂಲಕ 39,600 ಕೋಟಿ ರೂಪಾಯಿ ಸಾಲ ವಿತರಣೆ ಗುರಿಯನ್ನು ಹಾಕಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು 4 ಕಂದಾಯ ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳ ಮೂಲಕ ಈಗಾಗಲೇ ಸಹಾಯಧನ ವಿತರಣೆ ಮಾಡಲು ಚಾಲನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯ ದುರ್ಬಳಕೆಯಾಗಬಾರದು ಎಂಬ ನಿಟ್ಟಿನಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದೇವೆ. ಈ ಮೂಲಕ ಯೋಜನೆ ಯಶಸ್ಸಿಗೆ ಶ್ರಮ ವಹಿಸುತ್ತಿದ್ದೇವೆ ಎಂದರು.

LEAVE A REPLY

Please enter your comment!
Please enter your name here