ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ರಾಜ್ಯದ ಜನರ ಕಷ್ಟಕ್ಕೆ ಸ್ಪಂದಿಸುವ ಜತೆಗೆ ತಾರತಮ್ಯ ಮಾಡದೆ ನೆರವು ನೀಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಆಗ್ರಹಿಸಿದ್ದಾರೆ.

ರಾಜ್ಯಸರ್ಕಾರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೆಲಸ ಮಾಡುತ್ತಿದೆ. ಈ ಸಂದರ್ಭದಲ್ಲಿ ತಾವು ರಾಜಕೀಯ ಮಾಡುವುದಿಲ್ಲ. ಆದರೆ, ಕೇಂದ್ರ ಸರ್ಕಾರ ತಾರತಮ್ಯ ಮಾಡದೆ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯ ನೆರೆಪೀಡಿತ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಸಂತ್ರಸ್ಥರಿಗೆ ನೆರವು ನೀಡಲು ವೈಯಕ್ತಿಕವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಧುರೈನಿಂದ 10 ಸಾವಿರ ಬೆಡ್ಶಿಟ್ಗಳನ್ನು ತಂದು ಸಂತ್ರಸ್ಥರಿಗೆ ನೀಡಲಾಗುವುದು ಎಂದು ಹೇಳಿದರು.

ಪ್ರವಾಹದಿಂದ ಜನರು ಎಲ್ಲವನ್ನೂ ಕಳೆದುಕೊಂಡಿದ್ದು, ಜನರಲ್ಲಿ ಧೈರ್ಯ ತುಂಬುವ ಕೆಲಸವಾಗಬೇಕಾಗಿದೆ. ಜತೆಗೆ ಅಗತ್ಯವಿರುವವರಿಗೆ ಮೂಲ ಸೌಕರ್ಯವನ್ನು ಒದಗಿಸುವ ವಿಷಯದಲ್ಲಿ ರಾಜ್ಯಸರ್ಕಾರದ ಜತೆ ಸಂಪೂರ್ಣ ಸಹಕಾರ ನೀಡಲಾಗುವುದೆಂದರು.