ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಲಕ್ಷಾಂತರ ಜನರು ಸುರು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಆದರೆ ರಾಜ್ಯ ಸರ್ಕಾರ ಮಾತ್ರ ಪ್ರವಾಹವನ್ನು ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಇನ್ನೂ ಗಮನ ಹರಿಸಿಲ್ಲ. ಸಿಎಂ ಯಡಿಯೂರಪ್ಪನವರು ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಅಲೆಯುವುದರಲ್ಲೇ ಹೆಚ್ಚಿನ ಕಾಲ ಕಳೆದಿದ್ದಾರೆ. ರಾಜ್ಯ ಸರ್ಕಾರದ ಈ ನಡೆ ಇದೀಗ ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಉಂಟಾಗುತ್ತಿರುವಾಗಲೇ ಉತ್ತರಕರ್ನಾಟಕದ ಜಿಲ್ಲೆಗಳಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಸರ್ಕಾರ ಅದೆಲ್ಲವನ್ನೂ ಬದಿಗಿಟ್ಟು ಸಂಪುಟ ವಿಸ್ತರಣೆಯಲ್ಲೇ ಕಾಲ ಕಳೆಯಿತು. ಅದರ ಪರಿಣಾಮವೇ ಇದೀಗ ಪ್ರವಾಹ ಪರಿಸ್ಥಿತಿ ಭೀಕರ ಸ್ವರೂಪ ಪಡೆದುಕೊಂಡಿದೆ.
ರಾಜ್ಯಾದ್ಯಂತ ಸರ್ಕಾರದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸತೊಡಗಿದಾಗ ಸಿಎಂ ಯಡಿಯೂರಪ್ಪ ಇದೀಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಶುರು ಮಾಡಿದ್ದಾರೆ. ‘ಕೋಟೆ ಕೊಳ್ಳೆ ಹೊಡೆದ ಮೇಲೆ, ಕೋಟೆ ಬಾಗಿಲು ಮುಚ್ಚಿದರು’ ಎಂದು ಜನರು ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಧಾವಣಿ ಗ್ರಾಮಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದ ವೇಳೆ ಗ್ರಾಮಸ್ಥರು ಯಡಿಯೂರಪ್ಪನವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ನಮ್ಮ ಮನೆ-ಮಠಗಳೆಲ್ಲಾ ನದಿಯಲ್ಲಿ ಕೊಚ್ಚಿ ಹೋಗಿವೆ. ಈಗ ಬಂದಿದ್ದೀರಾ..? ನಮಗೆ ಇಲ್ಲಿ ಕನಿಷ್ಠ ಸೌಲಭ್ಯಗಳು ಸಿಗುತ್ತಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.