8.60 ಕೋಟಿ ರೂಪಾಯಿಗಳಷ್ಟು ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ತೀರ್ಪು ನೀಡಿದ್ದು, ಡಿಕೆಶಿ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಪ್ರಕರಣದಲ್ಲಿ ಇಡಿ ವಿಚಾರಣೆಗೆ ತಡೆ ನೀಡುವಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದ್ದು, ಈ ಪ್ರಕರಣ ವಿಚಾರಣೆಗೆ ಯೋಗ್ಯ ಎಂದು ಅಭಿಪ್ರಾಯಪಟ್ಟಿದ್ದು ಜಾರಿ ನಿರ್ದೇಶನಾಲಯಕ್ಕೆ ಸಮನ್ಸ್ ತಡೆ ನೀಡಲು ನ್ಯಾಯಪೀಠ ನಿರಾಕರಿಸಿದೆ.

ಈ ಎಲ್ಲ ಬೆಳವಣಿಗೆಗಳಿಂದ ರಾಜ್ಯ ರಾಜಕೀಯ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಡಿ.ಕೆ. ಶಿವಕುಮಾರ್ ಅವರ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ, ಇಡಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಈ ಮಧ್ಯೆ ಡಿಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮುಂದಿನ ರಾಜಕೀಯ ನಡೆಗಳ ಬಗ್ಗೆಯೂ ಸುದಿರ್ಘ ಚರ್ಚೆ ನಡೆದಿದೆ. ವಿರೋಧಿಗಳ ಷಡ್ಯಂತ್ರಕ್ಕೆ ಬಲಿಯಾಗದೆ ಪರಿಸ್ಥಿತಿಯನ್ನು ಎದುರಿಸುವಂತೆ ದೇವೇಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ನಿಮ್ಮನ್ನು ರಾಜಕೀಯವಾಗಿ ಮುಗಿಸಲು ಎಲ್ಲ ಸಿದ್ದತೆ ನಡೆದಿದೆ. ನೀವು ಧೈರ್ಯ ಕಳೆದುಕೊಳ್ಳದೇ ಹೋರಾಟ ನಡೆಸಿ ಎಂದಿದ್ದಾರೆ.
