ಪ್ರಹ್ಲಾದ್ ಜೋಶಿ ತಮ್ಮ ಪಕ್ಷದ ನಾಯಕರ ಆಸ್ತಿ ಬಹಿರಂಗ ಪಡಿಸಲಿ: ಡಿಕೆ ಶಿವಕುಮಾರ್ ಸವಾಲು..!

0
92

ಬೆಂಗಳೂರು: ರಾಜಕಾರಣದಲ್ಲಿ ಹಣ ಮಾಡದೇ ಇರುವವರು ಯಾರೂ ಇಲ್ಲವೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಯಿಂದ ಸ್ಪಷ್ಟವಾಗ್ತಿದೆ. ನಿನ್ನೆ ಡಿಕೆ ಶಿವಕುಮಾರ್ ನಿವಾಸದ ಮೇಲೆ ನಡೆದ ಸಿಬಿಐ ದಾಳಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದರು. ಡಿಕೆ ಶಿವಕುಮಾರ್ ಅವರ ಆಸ್ತಿ ಈ ಮುಂಚೆ ಎಷ್ಟಿತ್ತು, ಈಗ ಎಷ್ಟಿದೆ ಎಂದು ಪ್ರಶ್ನೆ ಹಾಕಿದ್ದರು. ಇದಕ್ಕೆ ಇಂದು ಉತ್ತರಿಸಿರುವ ಡಿಕೆ ಶಿವಕುಮಾರ್ ನನ್ನನ್ನು ಕೇಳುವ ಮುನ್ನ ತಮ್ಮ ಪಕ್ಷದ ನಾಯಕರ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಲಿ ಎಂದು ಸವಾಲು‌ ಹಾಕಿದ್ದಾರೆ..!

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ದೊಡ್ಡವರು. ತಮ್ಮ ಮನೆಯನ್ನು ಮೊದಲು ಶುದ್ಧ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

ಅವರು ನಮ್ಮ ಆಸ್ತಿ ಮುಂಚೆ ಎಷ್ಟಿತ್ತು, ಈಗ ಎಷ್ಟಿದೆ ಎಂದು ಕೇಳುವ ಮುನ್ನ ತಮ್ಮ ಪಕ್ಷದ ನಾಯಕರ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಲಿ. ಈ ದಾಳಿಗಳು ರಾಜಕೀಯ ಪ್ರೇರಿತ ಎಂಬುದನ್ನು ತಿಳಿಯಬೇಕಾದರೆ, ಎಫ್ ಐಆರ್ ಪ್ರತಿ ನೋಡಿ. ಪ್ರಾಥಮಿಕ ತನಿಖೆ ನಡೆದಿದ್ದು ಯಾವಾಗ? ನಾನು ಪಕ್ಷದ ಅಧ್ಯಕ್ಷ ಆಗಿದ್ದು ಯಾವಾಗ? ಎಫ್ ಐಆರ್ ದಾಖಲಿಸಿದ್ದು ಯಾವಾಗ? ಎಂಬುದನ್ನು ನೋಡಿ. ಆಗ ಸ್ಪಷ್ಟವಾಗಿ ತಿಳಿಯುತ್ತದೆ ಎಂದು ವಿವರಿಸಿದರು.

“ರಾಜಕಾರಣದಲ್ಲಿ ಏನನ್ನೂ ಗೌಪ್ಯವಾಗಿಡಲು ಸಾಧ್ಯವಿಲ್ಲ”

ತಮ್ಮ ನಿವಾಸದ ಮೇಲೆ ಸಿಬಿಐ ದಾಳಿ ಕುರಿತು ಸ್ಪಷ್ಟನೆ ನೀಡಿದ ಅವರು, ರಾಜಕಾರಣದಲ್ಲಿ ನಾವು ಯಾವುದನ್ನೂ ಗೌಪ್ಯವಾಗಿ ಇಡಲು ಸಾಧ್ಯವಿಲ್ಲ. ಡಿ.ಕೆ. ಸುರೇಶ್ ಅವರ ದೆಹಲಿ ನಿವಾಸದಲ್ಲಿ 1.50 ಲಕ್ಷ, ನಮ್ಮ ಮನೆಯಲ್ಲಿ 1.77 ಲಕ್ಷ, ನನ್ನ ಕಚೇರಿಯಲ್ಲಿ 3.50 ಲಕ್ಷ ರೂಪಾಯಿ ಸಿಕ್ಕಿದೆ. ಊರಿನಲ್ಲಿ ನನ್ನ ತಾಯಿಯವರಿಗೆ ಕೇಳಿದಾಗ, ಅವರು ಏನೂ ತೆಗೆದುಕೊಂಡು ಹೋಗಿಲ್ಲ ಅಂದ್ರು. ಬಾಂಬೆಯ ಮನೆಗೆ ನಾನು ಹೋಗಿ 6 ವರ್ಷ ಆಯ್ತು. ದೆಹಲಿಯ ಮನೆಯಲ್ಲಿ ಏನೂ ಇಲ್ಲ. ಕೆಲವು ಕಾಗದ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.

ನಮ್ಮ ಸ್ನೇಹಿತರಾದ ಸಚಿನ್ ನಾರಾಯಣ ಅವರ ಮನೆಯಲ್ಲಿ ಅವರ ವ್ಯವಹಾರಕ್ಕೆ ಸಂಬಂಧಿಸಿದ 50 ಲಕ್ಷ ರುಪಾಯಿ ಸಿಕ್ಕಿದೆಯಂತೆ. ಸಚಿನ್ ಅವರ ಜತೆ ಮಾತನಾಡಲು ಅವರು ಇನ್ನು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಧವನಂ ಬಿಲ್ಡರ್ಸ್ ಹತ್ರ ದಾಖಲೆ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಹಿತಿ ನೀಡಿದರು.

“ರೈತ ವಿರೋಧಿ ಕಾಯ್ದೆ ವಿರುದ್ದ ಸಹಿ ಸಂಗ್ರಹ”

ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ಆರಂಭಿಸುತ್ತಿದ್ದೇವೆ. ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದಂತೆ 2 ಕೋಟಿ ಸಹಿ ಸಂಗ್ರಹಿಸಲಾಗುವುದು. ಈ ಸಹಿಗಳುಳ್ಳ ಪತ್ರವನ್ನು ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಕಳುಹಿಸುತ್ತೇವೆ. ಅವರು ರಾಷ್ಟ್ರಪತಿ ಅವರಿಗೆ ಸಲ್ಲಿಸಲಿದ್ದಾರೆ. ಈ ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಮನವಿ ಮಾಡುತ್ತಾರೆ ಎಂದರು.

ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ಅಕ್ಟೋಬರ್ 10 ರಂದು ಮಂಡ್ಯದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಎಐಸಿಸಿ ಆದೇಶದಂತೆ ರಾಜ್ಯ ಮಟ್ಟದ ರೈತರ ಸಮ್ಮೇಳನವನ್ನು ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದೆವು. ಆದರೆ ಚುನಾವಣಾ ಆಯೋಗದ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಆಕ್ಟೊಬರ್ 10ರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here