‘ಡಿಕೆಶಿ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ’ ಬಿಜೆಪಿ ವಿರುದ್ದ ಎಚ್‍ಡಿಕೆ ಆಕ್ರೋಶ..!

0
356

ರಾಜ್ಯ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ಸೇರಿದಂತೆ ದೇಶದಲ್ಲಿ ಯಾವುದೇ ಪಕ್ಷಗಳು ಇರಬಾರದು ಎಂಬ ಉದ್ದೇಶದಿಂದ ಕುತಂತ್ರದ ರಾಜಕೀಯ ಮಾಡುತ್ತಿದೆ. ಮೋದಿ ಮತ್ತು ಅಮಿತ್ ಶಾ ಯಾವುದೇ ಪ್ರತಿಪಕ್ಷ ಇರಬಾರದು ಎಂಬ ಕಾರಣಕ್ಕಾಗಿ ಡಿ.ಕೆ.ಶಿವಕುಮಾರ್ ಅವರ ಬಂಧನವಾಗಿದೆ. ಸತತ ನಾಲ್ಕು ದಿನಗಳಿಂದ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿ, ಈಗ ಬಂಧನ ಮಾಡುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವೀಟ್ ಮಾಡಿ ಬಿಜೆಪಿ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, “ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೆ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಬಂಧನವನ್ನು ಖಂಡಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದು, ಅಶ್ವಥ್ ನಾರಾಯಣ್ ಮಲ್ಲೇಶ್ವರಂನಲ್ಲಿ ಏನೇನ್ ಲೂಟಿ ಹೊಡೆದಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ಬಿ.ಎಸ್.ಯಡಿಯೂರಪ್ಪ ಅವರು ದ್ವೇಷದ ರಾಜಕೀಯ ಮಾಡಲ್ಲ ಎನ್ನುತ್ತಾರೆ, ಆದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಫೋನ್ ಕದ್ದಾಲಿಕೆ ನಡೆದಿದೆ ಎಂದು ಸಿಬಿಐ ತನಿಖೆಗೆ ಆದೇಶ ನೀಡಿದ್ದಾರೆ. ಸಿಬಿಐ ಅಲ್ಲ, ವಿಶ್ವದ ಯಾವುದೇ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ತನಿಖೆ ಮಾಡಿಸಿದ್ರು ನನಗೇನು ಭಯವಿಲ್ಲ ಎಂದು ಎಚ್‍ಡಿಕೆ ಬಿಜೆಪಿ ವಿರುದ್ದ ಗುಡುಗಿದರು.

ಇನ್ನು ಕಾಂಗ್ರೆಸ್‍ನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ” ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here