ಶಿರಾದಲ್ಲಿ ಹೆಚ್.ಡಿ.ಕುಮಾರಸ್ವಾಮಿ ರೋಡ್ ಶೋ ವೇಳೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ..!!

0
180

ತುಮಕೂರು : ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಬ್ರಹ್ಮಸಂದ್ರ ಗ್ರಾಮದ ಬಳಿ, ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ರೋಡ್ ಶೋ ನಡೆಸುತ್ತಿದ್ದಂತ ವೇಳೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಳೆದೆರೆಡು ದಿನಗಳಿಂದ ಜೆಡಿಎಸ್ ಅಬ್ಬರದ ಪ್ರಚಾರ ನಡೆಸುತ್ತಿದೆ. ಜೆಡಿಎಸ್ ನಾಯಕರಾದ ಎಚ್.ಡಿ. ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಯುವನಾಯಕ ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ನಾಯಕರು ಕ್ಷೇತ್ರದಲ್ಲಿ ಬೀಡುಬಿಟ್ಟು ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ನಡೆಸುತ್ತಿರುವ ಭರ್ಜರಿ ಪ್ರಚಾರದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯದಲ್ಲಿ ನಡುಕ ಉಂಟಾಗಿದೆ. ಇದರಿಂದ ಶಿರಾ ಕ್ಷೇತ್ರದಲ್ಲಿ ರಾಜಕೀಯ ಸಂಘರ್ಷ ಮಾರಾಮಾರಿಗೆ ತಿರುಗಿದೆ. ಹೀಗಾಗಿಯೇ ಶಿರಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದ ಬೆನ್ನಲ್ಲೇ, ಅಹಿತಕರ ಘಟನೆಗಳಿಗೂ ಉಪ ಚುನಾವಣೆ ಕಣ ಸಾಕ್ಷಿಯಾಗುತ್ತಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರು ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ರೋಡ್ ಶೋಗೆ ಅಡ್ಡಿಪಡಿಸಿದ್ದು ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಘಟನೆ ರಾಜಕೀಯ ಮೇಲಾಟಗಳಿಗೆ ಕಾರಣವಾಗಿತ್ತು. ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಬಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ, ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ ವಿರುದ್ಧ ಘೋಷಣೆ ಕೂಗಲಾಯ್ತು. ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ಮತ್ತು ಜೆಡಿಎಸ್ ಪಕ್ಷದ ಬಗ್ಗೆ ಘೋಷಣೆ ಕೂಗಿದ್ದು ಜೆಡಿಎಸ್ ಕಾರ್ಯಕರ್ತರನ್ನು ಕೆರಳಿಸಿತು.

ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ವಾಗ್ವಾದ ತಾರಕಕ್ಕೇರಿದ್ದಲ್ಲದೇ, ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಮಾರಾಮಾರಿಯಲ್ಲಿ ಎರಡೂ ಪಕ್ಷಗಳ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಹಲವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಮಧ್ಯ ಪ್ರವೇಶಿಸಿ, ಲಾಠಿ ಪ್ರಹಾರ ನಡೆಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರನ್ನು ಚದುರಿಸಿದ್ದಾರೆ.


ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಈ ರೀತಿಯ ರಾಜಕೀಯ ಸಂಘರ್ಷಗಳು ಈ ಹಿಂದೆ ನಡೆದಿರುವುದು ಅಪರೂಪ. ಕರ್ನಾಟಕದಲ್ಲಿ ರಾಜಕೀಯ ಸಂಘರ್ಷ ಏನಿದ್ದರೂ ಟೀಕೆ-ವಾಗ್ವಾದಗಳಿಗೆ ಮಾತ್ರ ಸೀಮಿತವಾಗಿತ್ತು. ಒಂದು ಪಕ್ಷ ನಡೆಸುವ ರ‍್ಯಾಲಿ ಅಥವಾ ಸಭೆಯಲ್ಲಿ ಬೇರೆ ಪಕ್ಷದ ಕಾರ್ಯಕರ್ತರು ದಾಂಧಲೆ ಮಾಡುವ ಮಟ್ಟಕ್ಕೆ ರಾಜಕೀಯ ಸಂಘರ್ಷ ನಡೆದಿರಲಿಲ್ಲ. ಆದರೆ ಇದೀಗ ಉಪಚುನಾವಣೆಯಲ್ಲಿ ಮೂರು ಪಕ್ಷಗಳು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿವೆ. ಇದರಿಂದ ಮಾರಾಮಾರಿಯಂತಹ ಘಟನೆಗಳು ನಡೆಯುತ್ತಿರುವುದು ವಿಷಾದಕರ. ನಮ್ಮ ರಾಜ್ಯ ರಾಜಕೀಯ ಬಿಹಾರ ಮಾದರಿಯತ್ತ ಸಾಗದಿರಲಿ. ಪ್ರಬುದ್ದ ರಾಜಕೀಯಕ್ಕೆ ಹೆಸರುವಾಸಿಯಾದ ಕರ್ನಾಟಕ ಮುಂದಿನ ದಿನಗಳಲ್ಲಿಯೂ ತನ್ನ ಘನತೆಯನ್ನು ಉಳಿಸಿಕೊಳ್ಳಲಿ.

LEAVE A REPLY

Please enter your comment!
Please enter your name here