ಶೀಘ್ರದಲ್ಲೇ ಶಾಲಾರಂಭ ಚಿಂತನೆ: ಸಿಎಂ ಜೊತೆ ಚರ್ಚಿಸಿ ನಿರ್ಧಾರ ಎಂದ ಸುರೇಶ್ ಕುಮಾರ್

0
23

ಬೆಂಗಳೂರು: ಬಹಳ ದಿನ ಮಕ್ಕಳನ್ನು ಶಾಲೆಯಿಂದ ಹೊರಗಿಡುವುದು ಸರಿಯಲ್ಲ. ಹಾಗಾಗಿ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳನ್ನು ಆರಂಭಿಸಲು ಸರ್ಕಾರ ಸೂಕ್ತ ಚರ್ಚೆಯ ನಂತರ ನಿರ್ಣಯಕ್ಕೆ ಬರಲಿದೆ ಎಂದು
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಯಿತು.‌ ಈ ವೇಳೆ ಮಾತನಾಡಿದ ಅವರು, ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞ ಸಮಿತಿಯೊಂದಿಗೂ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.

ಹಲವು ರೀತಿಯಲ್ಲಿ ಮಕ್ಕಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಲಾಗಿದೆಯಾದರೂ  ಅದು ತರಗತಿ ಪಾಠಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ. ಆದರೆ ಬಹು ದಿನಗಳ ಕಾಲ ಮಕ್ಕಳು ಶಾಲೆಯಿಂದ ಹೊರಗುಳಿಯುವುದರಿಂದ ಆಗುತ್ತಿರುವ ಸಾಮಾಜಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸುವುದು ಉಚಿತವೆಂದು ಇತ್ತೀಚಿಗೆ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಮಕ್ಕಳು ಬಹುಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಸಮಾಜದ ಮೇಲೆ ಆಗಿರುವ ಪರಿಣಾಮಗಳು ಸರ್ಕಾರದ ಗಮನಕ್ಕೂ ಬಂದಿದೆ. ಮಕ್ಕಳ ಭವಿಷ್ಯವೂ ಇದರಲ್ಲಿ ಅಡಗಿರುವುದರಿಂದ ಬಹುಕಾಲ ಮಕ್ಕಳನ್ನು ಶಾಲೆಯಿಂದ ಹೊರಗಿಡುವುದು ಸರಿಯಲ್ಲ. ಹಾಗಾಗಿ ಮೇಲಿನ ತರಗತಿಗಳ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳನ್ನು ಆರಂಭಿಸಲು ಸರ್ಕಾರ ಸೂಕ್ತ ಚರ್ಚೆಯ ನಂತರ   ನಿರ್ಣಯಕ್ಕೆ ಬರಲಿದೆ ಎಂದು ಸಚಿವರು ಹೇಳಿದರು.

ಶಾಲಾ-ಕಾಲೇಜುಗಳು ಆರಂಭವಾಗದೇ ಇರುವುದರಿಂದ ಪೋಷಕರ ಕಳವಳ, ಮುಂದಿನ ವ್ಯಾಸಂಗಕ್ಕಾಗಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ  ಭವಿಷ್ಯ ಕುರಿತ ವಿಚಾರಗಳು ಸರ್ಕಾರದ ಗಮನದಲ್ಲಿವೆ. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರಾಜ್ಯದಲ್ಲೂ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯಗಳ ತರಗತಿಗಳನ್ನು ಆರಂಭಿಸಲಾಗಿದೆ. ಶಾಲಾ ಶಿಕ್ಷಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಲು ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್, ಎಕ್ಸ್‍ಪರ್ಟ್ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಕೆ.ಸಿ. ನಾಯಕ್, ದಾವಣಗೆರೆ ವಿಶ್ವೇಶ್ವರಯ್ಯ ಶಿಕ್ಷಣ  ಸಂಸ್ಥೆ ಅಧ್ಯಕ್ಷ ಶ್ರೀಧರ, ಕಲ್ಲಡ್ಕ ಶ್ರೀರಾಮ ವಿದ್ಯಾಮಂದಿರದ ಸಂಚಾಲಕ ವಸಂತ ಮಾಧವ, ಹೆಬ್ರಿ ಎಸ್.ಆರ್. ಪಿಯು  ಕಾಲೇಜು ಸಂಸ್ಥೆಯ ಅಧ್ಯಕ್ಷ ನಾಗರಾಜಶೆಟ್ಟಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 20ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿಶೇಷವಾಗಿ ಪದವಿ ಪೂರ್ವ ತರಗತಿಗಳನ್ನು ಆರಂಭಿಸಬೇಕಾದ ಅನಿವಾರ್ಯತೆಯನ್ನು ಮತ್ತು ಶಾಲೆಗಳ ಬಂದ್‍ನಿಂದಾಗಿ ಉದ್ಭವಿಸಿರುವ  ಗ್ರಾಮೀಣ ಪ್ರದೇಶದ ಪರಿಸ್ಥಿತಿ  ಹಾಗೂ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ಸಭೆಯ ವಿವರಿಸಿದರು.

LEAVE A REPLY

Please enter your comment!
Please enter your name here