ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಕಲಹ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಖಾತೆ ಹಂಚಿಕೆಯ ಅಸಮಾಧಾನ ಮತ್ತು ಮೂರು ಡಿಸಿಎಂ ಹುದ್ದೆಗಳ ಸೃಷ್ಟಿಯ ಅಪಸ್ವರದ ನಡುವೆ ಸಚಿವ ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸ ಬೇಡಿಕೆಯನ್ನು ಸಿಎಂ ಯಡಿಯೂರಪ್ಪನವರ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ಸಮುದಾಯದ ಪ್ರಬಲ ನಾಯಕರಾಗಿರುವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೊಸ ಬೇಡಿಕೆ ಇಟ್ಟಿದ್ದಾರೆ. ತಾವು ಸದ್ಯ ಪ್ರತಿನಿಧಿಸುವ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯ ಜೊತೆಗೆ ತಮ್ಮ ತವರು ಜಿಲ್ಲೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ನೀಡಿ ಎಂಬ ಬೇಡಿಕೆ ಇಟ್ಟಿದ್ದಾರೆ. ಈ ಮೂಲಕ ಶ್ರೀರಾಮಲು, ಈಗ ಮತ್ತೆ ಬಳ್ಳಾರಿ ಜಿಲ್ಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶ್ರೀರಾಮುಲು ಬೇಡಿಕೆಗೆ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ. ಸದ್ಯ ಬಿಜೆಪಿ ಸರ್ಕಾರದಲ್ಲಿ ಬಳ್ಳಾರಿಯಿಂದ ಯಾವುದೇ ಶಾಸಕನಿಗೂ ಸಚಿವ ಸ್ಥಾನ ಲಭಿಸಿಲ್ಲ. ಹೀಗಾಗಿ ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ಸಿಗಲಿದೆ.