ಕಾಂಗ್ರೆಸ್ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಇಡಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುದ್ದಿ ಮಾಸುವ ಮುನ್ನವೇ ಇದೀಗ ಮತ್ತಿಬ್ಬರು ಕಾಂಗ್ರೆಸ್ನ ಮಾಜಿ ಸಚಿವರು ಜೈಲು ಪಾಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸುದ್ದಿ ಇದೀಗ ರಾಜ್ಯ ಕಾಂಗ್ರೆಸ್ ಪಾಲಿಗೆ ಮರ್ಮಾಘಾತ ನೀಡಿದೆ. ಹೌದು, ಕಾಂಗ್ರೆಸ್ನ ಮಾಜಿ ಸಚಿವ ಕೆ.ಜೆ.ಜಾರ್ಜ್ ಅಕ್ರಮವಾಗಿ ವಿದೇಶದಲ್ಲಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಯಾವುದೇ ಮಾಹಿತಿ ನೀಡಿಲ್ಲ, ಹೀಗಾಗಿ ಅವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ದೂರು ಬಂದಿದೆ.

ಕೆ.ಜೆ. ಜಾರ್ಜ್ ಅವರು ತಮ್ಮ ಹೆಸರು ಸೇರಿದಂತೆ ಪತ್ನಿ, ಮಗಳು, ಅಳಿಯನ ಹೆಸರಲ್ಲಿ ಅಮೆರಿಕದ ನ್ಯೂಯಾರ್ಕ್ ಹಾಗೂ ಆಸ್ಟ್ರೇಲಿಯಾದಲ್ಲಿ ಆಸ್ತಿ ಹೊಂದಿದ್ದಾರೆ. ಈ ಕುರಿತ ದಾಖಲೆಗಳನ್ನು ದೂರುದಾರರು ಇ.ಡಿ. ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಶೆಲ್ ಕಂಪನಿ, ಬ್ಯಾಂಕ್ ಸಾಲ ಮತ್ತು ಹಲವಾರು ವ್ಯಕ್ತಿಗಳ ಮೂಲಕ ವಹಿವಾಟು ನಡೆಸಿ ಆಸ್ತಿ ಗಳಿಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇಡಿ ದೂರನ್ನು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ ಸಿಬಿಐಗೆ ವಿನಯ್ ಕುಲಕರ್ಣಿಗೆ ಜೈಲು ಭೀತಿ
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿಗೆ ಹಳೆಯ ಕೊಲೆ ಕೇಸ್ ಒಂದು ಸಂಕಷ್ಟ ತಂದಿಟ್ಟಿದೆ. 2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಆಗ ರಾಜ್ಯ ರಾಜಕೀಯದಲ್ಲಿ ಭಾರೀ ಸುದ್ದಿಯಾಗಿತ್ತು. ನಂತರ ಆ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು. ಆದರೆ ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸುವುದು ಬಹುತೇಕ ನಿಶ್ಚಿತವಾಗಿದೆ.

ಇನ್ನು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯನಾಗಿದ್ದ ಯೋಗೇಶ್ ಗೌಡ ಅವರನ್ನು ವಿರೋಧಿಗಳು ಭೀಕರವಾಗಿ ಧಾರವಾಡದ ಸಪ್ತಾಪುರದಲ್ಲಿ ಕೊಂದಿದ್ದರು. ಈ ಕೊಲೆಯಲ್ಲಿ ಅಂದಿನ ಧಾರವಾಡ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಕೈವಾಡವಿದೆ ಎಂದು ಎನ್ನುವ ಆರೋಪ ಕೇಳಿ ಬಂದಿತ್ತು. ಆದರೆ ಅಂದಿನ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಹಿಂದೇಟು ಹಾಕಿತ್ತು. ಆದರೆ ಇದೀಗ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಂದಾಗಿದೆ. ಐಎಂಎ ಹಾಗೂ ಫೋನ್ ಕದ್ದಾಲಿಕೆ ಪ್ರಕರಣದ ನಂತರ ಮತ್ತೊಂದು ಪ್ರಕರಣವನ್ನು ಸಿಬಿಐಗೆ ರಾಜ್ಯ ಸರ್ಕಾರ ವಹಿಸಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ವಿನಯ್ ಕುಲಕರ್ಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಎರಡು ಪ್ರಕರಣಗಳು ರಾಜ್ಯ ಕಾಂಗ್ರೆಸ್ನ್ನು ಮತ್ತೆ ಇಕ್ಕಟ್ಟಿಗೆ ಸಿಲುಕಿಸಿವೆ.